ಪುತ್ತೂರು: ಕ್ರೀಡಾ ತರಬೇತಿ ಸಂದರ್ಭದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಎಲಿಯಾಸ್ ಪಿಂಟೋ ಅವರನ್ನು ಕರ್ನಾಟಕ ಹೈಕೋರ್ಟ್ ದೋಷಮುಕ್ತಗೊಳಿಸಿದೆ.ಖಾಸಗಿ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ, ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಐಟಿಐ ಬಳಿಯ ನಿವಾಸಿ ಎಲಿಯಾಸ್ ಪಿಂಟೋ (55) ಅವರ ವಿರುದ್ಧ 2021ರ ಅ.23ರಂದು ಕ್ರೀಡಾ ತರಬೇತಿ ವೇಳೆ ಮಡಿಕೇರಿ ಮೂಲದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಪ್ರಕರಣದಲ್ಲಿ ಎಲಿಯಾಸ್ ಪಿಂಟೋ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಮಹಿಳಾ ಪೊಲೀಸ್ ಠಾಣೆಯ ಅಂದಿನ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ. ಅವರು ಎಲಿಯಾಸ್ ಪಿಂಟೋ ತಪ್ಪಿತಸ್ಥರೆಂದು ತೀರ್ಮಾನಿಸಿ, ಪೋಕ್ಸೋ ಕಾಯ್ದೆಯ ಕಲಂ 10ರ ಅಡಿಯಲ್ಲಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿದ್ದರು. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದರು.ಅದೇ ರೀತಿ, ಐಪಿಸಿ ಕಲಂ 354(2)ರ ಅಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಲಾಗಿತ್ತು. ದಂಡ ಪಾವತಿಸಲು ವಿಫಲರಾದರೆ 3 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿತ್ತು. ಈ ತೀರ್ಪು ಜ.19ರಂದು ಪ್ರಕಟವಾಗಿತ್ತು.ಹೈಕೋರ್ಟ್‌ಗೆ ಮೇಲ್ಮನವಿಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಎಲಿಯಾಸ್ ಪಿಂಟೋ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಕೆಳ ನ್ಯಾಯಾಲಯದ ಶಿಕ್ಷೆಗೆ ತಡೆ ನೀಡುವ ಮಧ್ಯಂತರ ಆದೇಶ ನೀಡಿತ್ತು.ನ್ಯಾಯಮೂರ್ತಿ ರಾಚಯ್ಯ ಅವರಿದ್ದ ಏಕಸದಸ್ಯ ಪೀಠ ಮೇಲ್ಮನವಿಯ ವಿಚಾರಣೆ ಪೂರ್ಣಗೊಳಿಸಿ, ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ರದ್ದುಪಡಿಸಿ, ಎಲಿಯಾಸ್ ಪಿಂಟೋ ಅವರನ್ನು ಖುಲಾಸೆಗೊಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!