ಧರ್ಮಸ್ಥಳ : ಆರೋಗ್ಯ ರಕ್ಷಣೆಯ ಜೊತೆಗೆ ಸಾಮಾಜಿಕ ಮತ್ತು ಕೌಟುಂಬಿಕ ಸಾಮರಸ್ಯವನ್ನು ಬೆಳೆಸುವಲ್ಲಿ ಭಜನೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಎರಡನೇ ದಿನದ ಶಿಬಿರದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಆರೋಗ್ಯ ರಕ್ಷಣೆಗೆ ಭಜನೆಯು ಪ್ರಮುಖ ಹಾದಿಯಾಗಿದ್ದು, ಬದುಕಿನ ಸುಗಮ ದಾರಿಗೆ ಸಹಕಾರಿಯಾಗಿದೆ’ ಎಂದು ಅವರು ಹೇಳಿದರು.ಭಜನೆಯಿಂದ ಸಾಮಾಜಿಕ ಪರಿವರ್ತನೆ, ಕೌಟುಂಬಿಕ ಸಾಮರಸ್ಯ ಹಾಗೂ ಉತ್ತಮ ನಡತೆಗಳು ಬೆಳೆಯುತ್ತವೆ. ಸಮಾಜದಲ್ಲಿ ತಲೆದೋರುವ ಹಲವು ಸಮಸ್ಯೆಗಳನ್ನು ದೂರ ಮಾಡುವಲ್ಲಿ ಭಜನೆಯು ಪ್ರಮುಖ ಪಾತ್ರ ವಹಿಸುತ್ತದೆ. ಜೀವನದ ಕತ್ತಲೆಯನ್ನು ದೂರ ಮಾಡಿ ಬೆಳಕು ಪಸರಿಸುವಂತೆ ಮಾಡುವ ಭಜನೆ, ದುಶ್ಚಟಗಳಿಂದ ದೂರವಾಗಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು.ವರ್ಣಜಾಗೃತಿ, ಮಧ್ಯವರ್ಜನ ಶಿಬಿರ ಹಾಗೂ ಭಜನಾ ಕಮ್ಮಟ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ ಹೆಗ್ಗಡೆ ದಂಪತಿ ಸಾವಿರಾರು ಜನರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ವಿವೇಕ್ ಪಾಯಸ್ ಶ್ಲಾಘಿಸಿದರು.ಇದೇ ವೇಳೆ ಭಜನಾ ಕಮ್ಮಟದ ಎರಡನೇ ದಿನದ ಶಿಬಿರದಲ್ಲಿ ಮಣಿಪಾಲದ ಸಂಗೀತ ವಿದುಷಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ನೀಡಿದರು.ಕಾರ್ಯಕ್ರಮದಲ್ಲಿ ಭಜನಾ ಕಮ್ಮಟ ಪರಿಷತ್ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಉಪಾಧ್ಯಕ್ಷೆ ಡಾ. ಹೇಮಾವತಿ ಅಮ್ಮನವರು, ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್, ಭಜನಾ ಕಮ್ಮಟದ ಮುಖ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಪರಿಷತ್‌ನ ಸದಸ್ಯರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!