ಪುತ್ತೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ದರ್ಬೆಯ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಲು ಮುಂದಾದರೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಎಚ್ಚರಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಅಧ್ಯಕ್ಷ ಟಿ.ಎ. ಸಹನವಾಜ್‌, ಸುಮಾರು 4 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಸೇವಾ ಕೇಂದ್ರದ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಸೇವೆಗೆ ಬಳಸದೆ ಕಳೆದ ನಾಲ್ಕು ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿದೆ ಎಂದು ಆರೋಪಿಸಿದರು.ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ನಿರ್ಮಿಸಿರುವ ಕಟ್ಟಡವನ್ನು ಇದೀಗ ಬೇರೆ ಉದ್ದೇಶಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ. ಕಟ್ಟಡವನ್ನು ಅದರ ಮೂಲ ಉದ್ದೇಶಕ್ಕಾಗಿಯೇ ಬಳಸಬೇಕು ಎಂದು ಅವರು ಒತ್ತಾಯಿಸಿದರು.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ ಮಾತನಾಡಿ, ಪುತ್ತೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಾದ ವ್ಯವಸ್ಥಿತ ಕಟ್ಟಡಗಳ ಕೊರತೆ ಇತ್ತು. ಬಿಜೆಪಿ ಸರಕಾರದ ಅವಧಿಯಲ್ಲಿ ಎಲ್ಲ ಸಮುದಾಯಗಳಿಗೂ ಸಮಾನ ಹಕ್ಕು ಮತ್ತು ಅವಕಾಶ ಕಲ್ಪಿಸುವ ಉದ್ದೇಶದಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದರು.ಮಾಜಿ ಶಾಸಕ ಸಂಜೀವ ಮಠಂದೂರು ಅವರ ಅವಧಿಯಲ್ಲಿ 2020ರಲ್ಲಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದಲೇ ಸೇವಾ ಕೇಂದ್ರವನ್ನೂ ನಿರ್ಮಿಸಲಾಗಿದೆ ಎಂದು ಹೇಳಿದರು.ಪುತ್ತೂರಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಬಾಲಕರ ಹಾಗೂ ಬಾಲಕಿಯರ ಹಾಸ್ಟೆಲ್ ನಿರ್ಮಿಸಲು ವಿಫಲವಾಗಿರುವವರು ಬಿಜೆಪಿ ಸರಕಾರ ನಿರ್ಮಿಸಿದ ಸೇವಾ ಕೇಂದ್ರವನ್ನು ಹಾಸ್ಟೆಲ್ ಆಗಿ ಪರಿವರ್ತಿಸಲು ಮುಂದಾಗಿರುವುದು ಸರಿಯಲ್ಲ. “ನಿಮಗೆ ತಾಕತ್ತಿದ್ದರೆ ಅಲ್ಪಸಂಖ್ಯಾತ ಸಮುದಾಯಕ್ಕೆ ಬಾಲಕರ ಹಾಗೂ ಬಾಲಕಿಯರ ಎರಡು ಹಾಸ್ಟೆಲ್‌ಗಳು ಮತ್ತು ಒಂದು ಸಮುದಾಯ ಭವನ ನಿರ್ಮಿಸಿ ತೋರಿಸಿ. ಬಿಜೆಪಿ ಸರಕಾರ ನಿರ್ಮಿಸಿದ ಕಟ್ಟಡದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬೇಡಿ” ಎಂದು ರಫೀಕ್ ದರ್ಬೆ ಸವಾಲು ಹಾಕಿದರು.ದರ್ಬೆಯ ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪುತ್ತೂರಿನ ಎರಡನೇ ನಗರವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ಇಲ್ಲಿಯೇ ಕಾರ್ಯನಿರ್ವಹಿಸುವುದರಿಂದ ಸಮುದಾಯದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲಿಸುತ್ತಾ ಬಂದಿದ್ದರೂ, ಅವರ ಅಭಿವೃದ್ಧಿಗೆ ಅಗತ್ಯವಾದ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿ ಸರಕಾರ ನಿರ್ಮಿಸಿರುವ ಸೇವಾ ಕೇಂದ್ರದಿಂದ ಅಲ್ಪಸಂಖ್ಯಾತರು ಬಿಜೆಪಿ ಪರ ಒಲವು ತೋರಬಹುದು ಎಂಬ ಆತಂಕ ಕಾಂಗ್ರೆಸ್‌ಗೆ ಇದೆ ಎಂದು ಹೇಳಿದರು.ಹಿರೇಬಂಡಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಆಲಿ ಮಾತನಾಡಿ, ಈಗಿನ ಶಾಸಕರ ನಾಲ್ಕು ವರ್ಷಗಳ ಕೊಡುಗೆ ಏನು ಎಂದು ಪ್ರಶ್ನಿಸಿದರು. ಬಿಜೆಪಿ ಸರಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ಶೀಘ್ರ ಉದ್ಘಾಟಿಸಿ ಅಲ್ಪಸಂಖ್ಯಾತರ ಬಹುಉಪಯೋಗಕ್ಕೆ ಮುಕ್ತಗೊಳಿಸಬೇಕು. ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಲು ಮುಂದಾದರೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸುಮ್ಮನಿರುವುದಿಲ್ಲ. ಅಗತ್ಯವಿದ್ದರೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಸ್ತರ್ ಮುಡಿಪು ಹಾಗೂ ಮಾಧ್ಯಮ ಪ್ರಮುಖ್ ರಾಜೇಶ್ ಬನ್ನೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!