ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷೆಯ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ ವಿಚಾರಣೆಗೆ ಹಾಜರಾಗದೆ ಗೈರುಹಾಜರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಪುತ್ತೂರು ತಾಲೂಕಿನ ನೆಲ್ಯಾಡಿ ಗ್ರಾಮದ ಗೋಳಿತೊಟ್ಟು ನಿವಾಸಿ, ಪ್ರಸ್ತುತ 34ನೇ ನೆಕ್ಕಿಲಾಡಿಯ ಸುಭಾಷ್ ನಗರದಲ್ಲಿ ವಾಸವಾಗಿರುವ ಮೊಹಮ್ಮದ್ ಮುಸ್ತಾಫಾ ಅಲಿಯಾಸ್ ಮುಸ್ತಾಫಾ (36) ಬಂಧಿತ ಆರೋಪಿ.ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಕಲಂ 394 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಎಸ್‌ಸಿ ನಂ. 65/2013ರ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯ ಆದೇಶದ ವಿರುದ್ಧ ಆರೋಪಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 2015ರಲ್ಲಿ ಕ್ರಿಮಿನಲ್ ಮೇಲ್ಮನವಿ ಸಂಖ್ಯೆ 602/2015ರಂತೆ ಮೇಲ್ಮನವಿ ಸಲ್ಲಿಸಿದ್ದನು. ಆದರೆ, ಮೇಲ್ಮನವಿ ದಾಖಲಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಉಚ್ಚ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು.











