ಬೆಂಗಳೂರು: ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪೈಕಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ತೀವ್ರ ಬರಪೀಡಿತವಾಗಿದ್ದು, ಉಳಿದ ಎಂಟು ತಾಲೂಕುಗಳನ್ನು ಮಧ್ಯಮ ಬರಪೀಡಿತ ಎಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ರಾಜ್ಯದಲ್ಲಿ ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಇದೀಗ ವೈಜ್ಞಾನಿಕ ಮೌಲ್ಯಮಾಪನ ಹಾಗೂ ಸ್ಥಳ ಪರಿಶೀಲನೆಯ ಆಧಾರದ ಮೇಲೆ ಹೊಸದಾಗಿ ಒಂಬತ್ತು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.ಹೊಸದಾಗಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತೀವ್ರ ಬರಪೀಡಿತವಾಗಿದ್ದರೆ, ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಮತ್ತು ದಾಂಡೇಲಿ ತಾಲೂಕುಗಳು ಮಧ್ಯಮ ಬರಪೀಡಿತವಾಗಿವೆ.ಈ ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಉಳಿದ ಕೆಲವು ತಾಲೂಕುಗಳಲ್ಲಿ ಟ್ರಿಗರ್-1 ಮಾನದಂಡಗಳ ಪರಿಶೀಲನೆ ನಡೆಯುತ್ತಿದ್ದು, ಅರ್ಹತೆ ಪಡೆದರೆ ಮುಂದಿನ ಹಂತದಲ್ಲಿ ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.₹18 ಸಾವಿರ ಕೋಟಿ ಪರಿಹಾರ ಕೋರಿದ್ದ ರಾಜ್ಯರಾಜ್ಯದಲ್ಲಿ ಬರದಿಂದ ಉಂಟಾಗಿರುವ ಒಟ್ಟು ನಷ್ಟದ ಅಂದಾಜಿನ ಅಂತಿಮ ಮೆಮೊರಾಂಡಮ್ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಬಹುಶಃ ಇನ್ನೊಂದು ವಾರದಲ್ಲಿ ಪೂರ್ಣಗೊಳ್ಳಲಿದೆ. ನಷ್ಟದ ಪ್ರಮಾಣಕ್ಕೆ ಅನುಗುಣವಾಗಿ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಪರಿಹಾರದ ಮೊತ್ತವನ್ನು ಲೆಕ್ಕಹಾಕಲಾಗುವುದು.ಕಳೆದ ವರ್ಷ ಸುಮಾರು ₹18,000 ಕೋಟಿ ಪರಿಹಾರ ಕೋರಲಾಗಿತ್ತು. ಈ ಬಾರಿ ರಾಜ್ಯದಾದ್ಯಂತ ನಷ್ಟ ಸಂಭವಿಸಿದ್ದು, ಬರಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೋರಬೇಕಾಗುವ ಸಾಧ್ಯತೆಯಿದೆ ಎಂದು ಸಚಿವರು ತಿಳಿಸಿದ್ದಾರೆ.ಎನ್‌ಡಿಆರ್‌ಎಫ್ ಮಾರ್ಗಸೂಚಿ ಸಡಿಲಿಕೆಗೆ ಮನವಿಬರ ಪರಿಹಾರಕ್ಕೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನು ಸಡಿಲಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಈ ಕುರಿತು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಪತ್ರ ಬರೆದಿದ್ದಾರೆ. ಕೇಂದ್ರ ಕೃಷಿ ಸಚಿವರಿಂದ ಪತ್ರ ಬಂದಿದ್ದು, ಮನವಿಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಇದನ್ನು ಹೊರತುಪಡಿಸಿ ಕೇಂದ್ರದಿಂದ ಬೇರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಚಿವರು ಹೇಳಿದ್ದಾರೆ.ಅಂತಿಮ ಮೆಮೊರಾಂಡಮ್ ಸಿದ್ಧವಾದ ಬಳಿಕ ಮುಖ್ಯಮಂತ್ರಿ, ಕಂದಾಯ ಸಚಿವರು ಸೇರಿದಂತೆ ರಾಜ್ಯದ ನಿಯೋಗ ದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ನಷ್ಟದ ವಿವರಗಳನ್ನು ಸಲ್ಲಿಸಿ ಪರಿಹಾರ ಕೋರಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!