ಪುತ್ತೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕಡಬ ತಾಲೂಕು ರಾಮಕುಂಜ ಗ್ರಾಮದ ಶೇಖರ ಅಲಿಯಾಸ್ ಸೇಸಪ್ಪ ಎಂಬಾತನಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.2020ರ ಅಕ್ಟೋಬರ್ 4ರಿಂದ 2021ರ ಫೆಬ್ರವರಿ 7ರ ಅವಧಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಉಮೇಶ್ ವೈ. ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 20 ಸಾಕ್ಷಿಗಳ ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ತೀರ್ಪು ಪ್ರಕಟಿಸಿದ್ದಾರೆ.ಪೋಕ್ಸೋ ಕಾಯ್ದೆಯ ಸೆಕ್ಷನ್ 5(ಎಲ್) ಜೊತೆಗೆ ಸೆಕ್ಷನ್ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.ಸಂತ್ರಸ್ತ ಬಾಲಕಿಗೆ ₹6 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕುಡ್ರಿಯ ಪುಷ್ಪರಾಜ್ ಆಡ್ಯಂತಾಯ ವಾದ ಮಂಡಿಸಿದ್ದರು.










