ಮಡಿಕೇರಿ: ಚಲಿಸುತ್ತಿದ್ದ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪ ನಡೆದಿದೆ.ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ನಾಲ್ಕು ವರ್ಷದ ಮಗಳು ಲಿಯ ಎಂದು ಗುರುತಿಸಲಾಗಿದೆ.ಸೋಮವಾರ ರಾತ್ರಿ ವಿಜೇಶ್ ಅವರು ಪತ್ನಿ ಹಾಗೂ ಮಗಳೊಂದಿಗೆ ಸ್ಯಾಂಟ್ರೋ ಕಾರಿನಲ್ಲಿ ಸಿದ್ದಾಪುರದಿಂದ ಬಾಡಗ ಬಾಣಂಗಾಲ ಗ್ರಾಮದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಕಾರಿನೊಳಗೆ ಸಿಲುಕಿದ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಮಂಗಳವಾರ ಬೆಳಗ್ಗೆ ತೋಟದ ಕಾರ್ಮಿಕರು ಕೆರೆಯಲ್ಲಿ ಕಾರು ಬಿದ್ದಿರುವುದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕಾರಿನೊಳಗೆ ಮೂವರೂ ಮೃತಪಟ್ಟಿರುವುದು ತಿಳಿದುಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಕೆರೆಗೆ ಉರುಳಲು ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.









