ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಹಲ್ಲೆ ನಡೆಸಿದ್ದರಿಂದ ಪತ್ನಿ ಮೃತಪಟ್ಟಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ಸುನೀತಾ ಮಹಾದೇವ್ ದೇಸಂಗಿ (34) ಮೃತಪಟ್ಟವರು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಸಂಜೀವಕುಮಾರ್ (36) ಅವರನ್ನು ವಿವಾಹವಾಗಿದ್ದ ಸುನೀತಾ, ಪತಿಯೊಂದಿಗೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ವಾಸವಾಗಿದ್ದರು.ದಂಪತಿ ನಡುವೆ ವೈವಾಹಿಕ ಕಲಹವಿದ್ದು, ಸಂಬಂಧಿಕರು ಮಧ್ಯಸ್ಥಿಕೆ ವಹಿಸಿ ರಾಜಿ ಸಂಧಾನ ನಡೆಸಿದ್ದರು ಎನ್ನಲಾಗಿದೆ. ಹೆರಿಗೆಯ ಬಳಿಕ ತವರು ಮನೆಯಲ್ಲಿದ್ದ ಸುನೀತಾ ಅವರನ್ನು ಅ. 4ರಂದು ಪತಿ ಬಂಟ್ವಾಳದ ಮನೆಗೆ ಕರೆತಂದಿದ್ದ. ಅ. 22ರಂದು ಸುನೀತಾ ತನ್ನ ಸಹೋದರ ಅರುಣ್ ಮಹಾದೇವ್ ದೇಸಂಗಿ ಅವರಿಗೆ ಕರೆ ಮಾಡಿ, ಪತಿ ಕಿರುಕುಳ ನೀಡುತ್ತಿದ್ದು, ಹಲ್ಲೆ ನಡೆಸುತ್ತಿರುವುದಾಗಿ ತಿಳಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಅ. 23ರಂದು ಮುಂಜಾನೆ ಸಂಜೀವಕುಮಾರ್ ಕರೆ ಮಾಡಿ, ಸುನೀತಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ತಿಳಿಸಿದ್ದ. ಬಳಿಕ ಸ್ಥಳಕ್ಕೆ ಬಂದ ಅರುಣ್ ಪರಿಶೀಲಿಸಿದಾಗ ಸುನೀತಾ ಮೃತಪಟ್ಟಿದ್ದರು. ಮೃತದೇಹದ ಮೇಲೆ ಹಲ್ಲೆಯ ಗಾಯಗಳು ಹಾಗೂ ರಕ್ತದ ಗುರುತುಗಳು ಕಂಡುಬಂದಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.ಅ. 22ರ ರಾತ್ರಿ ಹಾಗೂ ಅ. 23ರ ಮುಂಜಾನೆಯ ನಡುವೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಆರೋಪಿಸಿ ಅರುಣ್ ದೂರು ನೀಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 142/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 103ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿ ಸಂಜೀವಕುಮಾರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.









