ಬೆಳ್ತಂಗಡಿ: ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.24ರಂದು ಮಧ್ಯಾಹ್ನ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.ದೂರಿನ ಆಧಾರದಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ









