ಕುಂದಾಪುರ, ಅ.25: ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕತ್ತಿಯಿಂದ ಕಡಿದು ಕೊಲೆಗೈದ ಬಳಿಕ ತಾಯಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಶಾನಾಡಿ ಗ್ರಾಮದ ಕೊರಗ ಕಾಲನಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.ಶಾನಾಡಿ ನಿವಾಸಿ ಸುಧಾಕರ ಕೊರಗ ಅವರ ಪತ್ನಿ ನೇತ್ರಾವತಿ (40) ಹಾಗೂ ಪುತ್ರಿ ಸುಪ್ರತಿ (14) ಮೃತರು.ಕೊರಗ ಸಮುದಾಯಕ್ಕೆ ಸೇರಿದ ಸುಧಾಕರ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ದಂಪತಿಯ ಪುತ್ರಿ ಸುಪ್ರತಿ ಹುಟ್ಟಿನಿಂದಲೇ ಅಂಗವಿಕಲೆಯಾಗಿದ್ದು, ನಡೆಯಲು ಅಥವಾ ಕುಳಿತುಕೊಳ್ಳಲು ಸಾಧ್ಯವಾಗದೆ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿಯಲ್ಲಿದ್ದಳು. ಮಗಳ ಆರೈಕೆಯನ್ನು ತಾಯಿಯೇ ಮಾಡುತ್ತಿದ್ದರು ಎನ್ನಲಾಗಿದೆ. ದಂಪತಿಗೆ ಒಂದು ವರ್ಷದ ಗಂಡು ಮಗುವೂ ಇದೆ.ಭಾನುವಾರ ಬೆಳಗ್ಗೆ ಸುಧಾಕರ ಅವರು ಕೆಲಸಕ್ಕೆ ತೆರಳಿದ ಬಳಿಕ ನೇತ್ರಾವತಿ ಮಗಳನ್ನು ಕತ್ತಿಯಿಂದ ಕಡಿದು ಕೊಲೆಗೈದು, ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.









