ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಳಿಬಂದ ಆರೋಪಗಳು ಕಟ್ಟುಕಥೆಯಾಗಿದ್ದು, ಈವರೆಗಿನ ತನಿಖೆಯಲ್ಲಿ ಅವುಗಳಿಗೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ತಿಳಿಸಿದೆ. ಈ ಮೂಲಕ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಸಿಸಿಬಿ ಕ್ಲೀನ್‌ಚಿಟ್ ನೀಡಿದೆ.ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬಿಂಬಿಸಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ನಿರೂಪಣೆಯ ಭಾಗವಾಗಿರುವಂತೆ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಸಿಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.ವಿಡಿಯೋದಲ್ಲಿ ತೋರಿಸಿರುವ ರೀತಿಯಲ್ಲಿ ಯಾವುದೇ ಘಟನೆ ನಡೆದಿರುವುದನ್ನು ಈವರೆಗೆ ದಾಖಲಿಸಲಾದ ಹೇಳಿಕೆಗಳು ಹಾಗೂ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳು ದೃಢಪಡಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಎಲ್ಲ ವ್ಯಕ್ತಿಗಳನ್ನು ಗುರುತಿಸಿ, ಸಮಗ್ರವಾಗಿ ವಿಚಾರಣೆ ನಡೆಸಲಾಗಿದೆ. ಕೆಲವರನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಅವರ ಹೇಳಿಕೆಗಳು ಮತ್ತು ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದಲ್ಲಿ ವಿಡಿಯೋದಲ್ಲಿ ಉಲ್ಲೇಖಿಸಲಾದ ಅಥವಾ ಪರೋಕ್ಷವಾಗಿ ಆರೋಪಿಸಲಾದ ವ್ಯಕ್ತಿಗಳ ವಿರುದ್ಧದ ಆರೋಪಗಳು ಸುಳ್ಳು ಹಾಗೂ ಕಟ್ಟುಕಥೆಯಿಂದ ಕೂಡಿರುವಂತೆ ಮೇಲ್ನೋಟಕ್ಕೆ ಕಂಡುಬಂದಿವೆ ಎಂದು ಸಿಸಿಬಿ ಹೇಳಿದೆ.ಆದರೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.









