ಮಂಗಳೂರು: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದ ದ್ವೇಷದ ಹಿನ್ನೆಲೆಯಲ್ಲಿ ರಾಕೇಶ್ ಎಂಬಾತನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಆರೋಪಿಗಳೂ ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.2019ರ ಜನವರಿ 3ರಂದು ಮಂಗಳೂರಿನ ಪಂಜಿಮೊಗರು ಮಾಲಾಡಿ ರಸ್ತೆ, ಎಂ.ವಿ. ಶೆಟ್ಟಿ ಕಾಲೇಜಿನ ಬಳಿ ಈ ಕೊಲೆ ನಡೆದಿತ್ತು. ಪ್ರಕರಣದ ಮೊದಲನೇ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಕೌಟಿ ಎಂಬಾತನ ತಂಗಿಯನ್ನು ರಾಕೇಶ್ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಸುನಿಲ್ ಕುಮಾರ್ ಅಲಿಯಾಸ್ ಕೌಟಿ, ಪ್ರವೀಣ್ ಪೂಜಾರಿ ಅಲಿಯಾಸ್ ಚೋಟು, ಪ್ರೀತಮ್ ಅಲಿಯಾಸ್ ಅಭಿ ಮತ್ತು ರೋಹಿತ್ ಕುಮಾರ್ ಅಲಿಯಾಸ್ ಶೂಟರ್ ಸೇರಿ ರಾಕೇಶ್‌ನನ್ನು ತಲವಾರಿನಿಂದ ಕೊಲೆ ಮಾಡಿದ್ದರು.ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2019ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಮಟೆ ಅವರು ನಾಲ್ವರು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.ಮೂವರಿಗೆ ಜೀವಾವಧಿ ಶಿಕ್ಷೆ1ರಿಂದ 3ನೇ ಆರೋಪಿಗಳಿಗೆ: ಐಪಿಸಿ ಕಲಂ 302, 120(ಬಿ) ಜೊತೆಗೆ 34ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ತಲಾ ₹15,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು.ನಾಲ್ವರು ಆರೋಪಿಗಳಿಗೆ: ಐಪಿಸಿ ಕಲಂ 201 ಜೊತೆಗೆ 34ರ ಅಡಿಯಲ್ಲಿ ತಲಾ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ತಿಂಗಳ ಹೆಚ್ಚುವರಿ ಶಿಕ್ಷೆ ವಿಧಿಸಲಾಗಿದೆ.4ನೇ ಆರೋಪಿಗೆ: ಐಪಿಸಿ ಕಲಂ 212 ಜೊತೆಗೆ 34ರ ಅಡಿಯಲ್ಲಿ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು.ಒಟ್ಟು ₹70,000 ದಂಡದ ಮೊತ್ತದಲ್ಲಿ ₹20,000ವನ್ನು ಸರ್ಕಾರಕ್ಕೆ ಹಾಗೂ ₹50,000ವನ್ನು ಮೃತ ರಾಕೇಶ್‌ನ ತಂದೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತೀಲಾಲ್ ಚೌದರಿ ಸರ್ಕಾರದ ಪರ ವಾದ ಮಂಡಿಸಿದ್ದರು. ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿದ್ದರು.









