ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಸ್ಥಳೀಯಾಡಳಿತ ಸಂಸ್ಥೆಗಳ ನಿರ್ಲಕ್ಷ್ಯ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.

ನ.2ರಂದು ಪುತ್ತೂರಿನ ಬೊಳುವಾರಿನಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ವಿವಿಧ ಗ್ರಾಮಗಳಲ್ಲಿ ಪ್ರತಿಭಟನಾ ಸಭೆಗಳನ್ನು ನಡೆಸಿದ ಬಳಿಕ ನ.19ರಂದು ವಿಟ್ಲದಲ್ಲಿ ಸಮಾರೋಪಗೊಳ್ಳಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ 31 ಗ್ರಾಮ ಪಂಚಾಯತ್‌ಗಳು, ಒಂದು ನಗರಸಭೆ ಹಾಗೂ ಒಂದು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 33 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು.ಸ್ಥಳೀಯಾಡಳಿತ ಚುನಾವಣೆ ನಡೆಸುವುದೇ ಪ್ರಮುಖ ಆಗ್ರಹಈ ಹೋರಾಟವನ್ನು ‘ಹೈಬ್ರಿಡ್ ಪಾದಯಾತ್ರೆ’ ಎಂದು ಬಣ್ಣಿಸಿದ ಸಂಜೀವ ಮಠಂದೂರು, ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸುವುದೇ ಇದರ ಪ್ರಮುಖ ಉದ್ದೇಶವಾಗಿದೆ ಎಂದರು.ಕಾಂಗ್ರೆಸ್ ಸರಕಾರವು ‘ವೋಟ್ ಚೋರಿ’ ಆರೋಪದ ಮೂಲಕ ಅಧಿಕಾರಕ್ಕೆ ಬಂದಿದೆ. ಇತ್ತೀಚೆಗೆ ಮತಪತ್ರದ ಮೂಲಕ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಕಾಂಗ್ರೆಸ್‌ನ ಆರೋಪಗಳಿಗೆ ಉತ್ತರ ನೀಡಿದೆ ಎಂದು ಹೇಳಿದರು.ಪ್ರಜಾಪ್ರಭುತ್ವದ ರಕ್ಷಕರು ಹಾಗೂ ಸಂವಿಧಾನದ ಪ್ರತಿಪಾದಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವದ ಮೇಲೆ ನಿಜವಾದ ವಿಶ್ವಾಸವಿದ್ದರೆ ತಕ್ಷಣ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.ಗ್ರಾಮ ಪಂಚಾಯತ್‌ಗಳ ಅವಧಿ ಮುಗಿದು ಒಂದು ವರ್ಷ ಕಳೆದಿದೆ. ತಾಲೂಕು ಪಂಚಾಯತ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ಗಳ ಅವಧಿ ಮುಗಿದು ಆರು ವರ್ಷಗಳಾಗಿವೆ. ಪುತ್ತೂರು ನಗರಸಭೆಯ ಅವಧಿ ಮುಗಿದು ಒಂದು ವರ್ಷ ಕಳೆದಿದ್ದರೆ, ಎಪಿಎಂಸಿಗಳಿಗೆ ಚುನಾವಣೆ ನಡೆಸದೆ ನಾಲ್ಕು ವರ್ಷಗಳಾಗಿವೆ. ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶಗಳಿಗೂ ಮನ್ನಣೆ ನೀಡದೆ ಸರಕಾರ ನಡೆದುಕೊಳ್ಳುತ್ತಿದೆ ಎಂದು ಅವರು ಟೀಕಿಸಿದರು.ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ನಗರಸಭೆಗಳಿಗೆ ಚುನಾವಣೆ ನಡೆಸುವ ಮೂಲಕ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.ನಗರಸಭೆ ಆಡಳಿತ ನಿಷ್ಕ್ರಿಯ: ಆರೋಪಪುತ್ತೂರು ನಗರಸಭೆಯ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಳೆದ ಒಂದು ವರ್ಷದಲ್ಲಿ ಜಿಲ್ಲಾಧಿಕಾರಿಗಳು ನಗರಸಭೆಯಲ್ಲಿ ಒಂದೇ ಒಂದು ಪರಿಶೀಲನಾ ಸಭೆ ನಡೆಸಿಲ್ಲ. ನಗರಸಭೆಯ ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದರು.ರಾಜ್ಯ ಸರಕಾರದಿಂದ ನಿರೀಕ್ಷಿತ ಅನುದಾನಗಳು ಬಿಡುಗಡೆಯಾಗುತ್ತಿಲ್ಲ. ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಇಲ್ಲದಿರುವುದರಿಂದ ಕೇಂದ್ರದ 16ನೇ ಹಣಕಾಸು ಆಯೋಗದ ಅನುದಾನ ಪಡೆಯುವ ಪ್ರಕ್ರಿಯೆಯ ಮೇಲೂ ಪರಿಣಾಮ ಉಂಟಾಗುತ್ತಿದೆ. ಇದರ ಹೊರೆ ಅಂತಿಮವಾಗಿ ಜನಸಾಮಾನ್ಯರ ಮೇಲೆ ಬೀಳುತ್ತಿದೆ ಎಂದರು.ಸರಕಾರ ಆರ್ಥಿಕ ಸಂಕಷ್ಟದಲ್ಲಿದ್ದರೂ ಸಂವಿಧಾನವನ್ನು ರಕ್ಷಿಸುವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಗೌರವ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು ಎಂದು ಹೇಳಿದರು.ಬೊಳುವಾರಿನಿಂದ ಕಿಲ್ಲೆ ಮೈದಾನದವರೆಗೆ ಪಾದಯಾತ್ರೆನ.2ರಂದು ಪುತ್ತೂರಿನ ಬೊಳುವಾರಿನ ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಿಂದ ಪಾದಯಾತ್ರೆ ಆರಂಭವಾಗಲಿದೆ. ಅಲ್ಲಿಂದ ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದವರೆಗೆ ತೆರಳಿ ಪ್ರತಿಭಟನೆ ನಡೆಸಲಾಗುವುದು. ಬಳಿಕ ಪುತ್ತೂರು ನಗರಸಭೆ ಕಚೇರಿ ಎದುರು ಮನವಿ ಸಲ್ಲಿಸಲಾಗುವುದು ಎಂದು ಸಂಜೀವ ಮಠಂದೂರು ವಿವರಿಸಿದರು.ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹಾಗೂ ಪುತ್ತೂರು ಜಿಲ್ಲಾ ಸಂಯೋಜಕ ವಿಕಾಸ್ ಪುತ್ತೂರು ಭಾಗವಹಿಸಲಿದ್ದಾರೆ.ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್‌ಗಳು ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆಗಳು ನಡೆಯಲಿವೆ. ಸ್ಥಳೀಯಾಡಳಿತ ಸಂಸ್ಥೆಗಳ ಕಚೇರಿಗಳ ಎದುರು ‘ನಮ್ಮ ಹಕ್ಕು ನಮಗೆ ನೀಡಿ’ ಎಂಬ ಘೋಷಣೆಯೊಂದಿಗೆ ಚುನಾವಣೆ ನಡೆಸುವಂತೆ ಆಗ್ರಹಿಸಲಾಗುವುದು. ನ.19ರಂದು ವಿಟ್ಲದಲ್ಲಿ ಪಾದಯಾತ್ರೆಯ ಸಮಾರೋಪ ನಡೆಯಲಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ಮಾಧ್ಯಮ ಪ್ರಮುಖ್ ಮಹೇಶ್ ಕೇರಿ ಹಾಗೂ ಮಾಧ್ಯಮ ವಕ್ತಾರ ರಾಜೇಶ್ ಬನ್ನೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!