ಮಂಗಳೂರು: ನಿಷೇಧಿತ ಮಾದಕವಸ್ತು ಎಲ್‌ಎಸ್‌ಡಿ (LSD) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಸ್ಟ್ರಿಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರದಿಂದ ಮಾದಕವಸ್ತು ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನ. 3ರಂದು ಮಧ್ಯಾಹ್ನ ನಗರದ ಪಡೀಲ್ ರೈಲ್ವೆ ಸೇತುವೆ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಮತ್ತು ಸಿದ್ದಾರ್ಥ ಶೆಟ್ಟಿ (35) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹3.35 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ನಿಹಾಲ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. ಸಿದ್ದಾರ್ಥ ಶೆಟ್ಟಿ ವಿರುದ್ಧ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ ಹಾಗೂ ಗಾಂಜಾ ಮಾರಾಟ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.









