ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಜನತೆಯನ್ನು ಕತ್ತಲಲ್ಲಿ ಇಟ್ಟಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಆರ್.ಸಿ. ನಾರಾಯಣ ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಸವಣೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಹಾಲಿನ ಬೆಲೆಯನ್ನು ಲೀಟರ್‌ಗೆ 8 ರೂ. ಹೆಚ್ಚಿಸುವುದಾಗಿ ಹೇಳಿ, 12 ರೂ.ಗೂ ಅಧಿಕ ಹೊರೆ ಜನರ ಮೇಲೆ ಹಾಕಲಾಗಿದೆ. ರೈತರಿಗೆ ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆಯಲೂ ಕಷ್ಟವಾಗುತ್ತಿದೆ. ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಸರ್ಕಾರ ಆದ್ಯತೆ ನೀಡುತ್ತಿಲ್ಲ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟುಮಾಡಲಾಗುತ್ತಿದೆ ಎಂದು ಟೀಕಿಸಿದರು.

ಬಿಜೆಪಿಯ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ಪಾದಯಾತ್ರೆ’ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಘೋಷಣೆಯಡಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಅಂಗವಾಗಿ ಸವಣೂರು ಪೇಟೆಯಿಂದ ಗ್ರಾಮ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸುಳ್ಯ ಮಂಡಲ ಸಮಿತಿ ಸದಸ್ಯ ತಾರಾನಾಥ ಕಾಯರ್ಗ, ಸವಣೂರು ಶಕ್ತಿ ಕೇಂದ್ರದ ಪ್ರಮುಖ ಚೇತನ್ ಕೋಡಿಬೈಲು, ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಗಣೇಶ್ ಉದನಡ್ಕ, ಎಸ್‌ಟಿ ಮೋರ್ಚಾ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ದೇಂತಾರು, ಕಾರ್ಯದರ್ಶಿ ಜಯಪ್ರಕಾಶ್ ಕರಿಂಬಿಲ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ದಿನೇಶ್ ಮೆದು, ಶಕ್ತಿ ಕೇಂದ್ರದ ಪ್ರಮುಖರಾದ ಮಹೇಶ್ ಸವಣೂರು, ಅನ್ನಪೂರ್ಣ, ಪ್ರಸಾದ ರೈ, ಧರ್ಮೇಂದ್ರ ಕಟ್ಟತ್ತಾರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!