ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಪುತ್ತೂರು ತಾಲೂಕಿನ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನ ವಶದಲ್ಲಿದ್ದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಪುತ್ತೂರು ತಾಲೂಕಿನ ಪಡ್ನೂರು ಅಂಚೆಯ ಪಡ್ಡಾಯೂರು ಹೌಸ್ ನಿವಾಸಿ ಹಂಜಾ ಅವರ ಪುತ್ರ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.
ನ. 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಗಾಂಜಾ ಮಾರಾಟಕ್ಕೆ ತಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ಅವರ ತಂಡದ ಅಧಿಕಾರಿಗಳು ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ವೇಳೆ ಆರೋಪಿಯ ವಶದಲ್ಲಿದ್ದ ಅಂದಾಜು ₹1.90 ಲಕ್ಷ ಮೌಲ್ಯದ 3.8 ಕೆ.ಜಿ. ಗಾಂಜಾ, ₹4 ಸಾವಿರ ಮೌಲ್ಯದ ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ಅಂದಾಜು ₹2 ಲಕ್ಷ ಮೌಲ್ಯದ ಕೆಎಲ್ 14 1662 ನೋಂದಣಿ ಸಂಖ್ಯೆಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹3.94 ಲಕ್ಷ ಎಂದು ಅಂದಾಜಿಸಲಾಗಿದೆ.
ಆರೋಪಿಯು ಸುರತ್ಕಲ್, ಪಣಂಬೂರು, ಕಾವೂರು ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಈ ಹಿಂದೆಯೂ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 137/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.









