ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿಯಾಗಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮದ ಸಮೀಪ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಇಬ್ರಾಹಿಂಪುರ ಗ್ರಾಮದ ಬಳಿಯ ಡಿಬಿಎಲ್ ಕ್ಯಾಂಪ್ ಸಮೀಪ ಸೂರತ್-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಆರು ಪಥಗಳ ರಸ್ತೆಯಲ್ಲಿ ನ.6ರಂದು ರಾತ್ರಿ 11ರಿಂದ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಕೆಎ-34 ಎನ್-6622 ನೋಂದಣಿ ಸಂಖ್ಯೆಯ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದಲ್ಲಿದ್ದ ಸೇತುವೆಗೆ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಗುರುರಾಜ್ ಸುರೇಶ ಚವ್ಹಾಣ (29) ಹಾಗೂ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ರೆಡ್ಡಿ ಬಾಮ್ಲಾ ರಾಠೋಡ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸೀಟಿನಲ್ಲಿದ್ದ ಗೋವಿಂದ ಸೀತ್ಯಾ ಚವ್ಹಾಣ (28) ಮತ್ತು ಕುಮಾರ ರಾಮು ರಾಠೋಡ (26) ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 1.20ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ನಾಲ್ವರೂ ಲಂಬಾಣಿ ಸಮುದಾಯಕ್ಕೆ ಸೇರಿದವರಾಗಿದ್ದು, ಯಾದಗಿರಿ ತಾಲ್ಲೂಕಿನ ವಿವಿಧ ತಾಂಡಾಗಳ ನಿವಾಸಿಗಳಾಗಿದ್ದಾರೆ.

ಅತಿವೇಗ ಮತ್ತು ಅಜಾಗರೂಕತೆಯ ಆರೋಪ :

ಕಾರು ಚಾಲಕ ಗುರುರಾಜ್ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಢಿಕ್ಕಿ ಹೊಡೆದಿದೆ ಎಂದು ಮೃತ ರೆಡ್ಡಿ ಅವರ ಸಹೋದರ ಮಂಗ್ಯಾ ಬಾಮ್ಲಾ ರಾಠೋಡ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 281 ಮತ್ತು 106(1)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!