ಪುತ್ತೂರು: ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೀರೋ ಬ್ಯಾಲೆನ್ಸ್ ಸರ್ಕಾರದ ಶ್ರೀಮಂತ ಮುಖ್ಯಮಂತ್ರಿ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ ರೆಂಜ ವ್ಯಂಗ್ಯವಾಡಿದರು.
ಶನಿವಾರ ಕೊಯಿಲದಲ್ಲಿ ಬಿಜೆಪಿ ಕೊಯಿಲ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಲಂಚ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅಮಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಚುನಾವಣೆ ನಡೆಸಲೂ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇದೇ ಸರ್ಕಾರ ಮುಂದುವರಿದರೆ ಜನರ ಬದುಕು ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲಿದೆ. ಆದ್ದರಿಂದ ಜನರು ಎಚ್ಚೆತ್ತುಕೊಳ್ಳಬೇಕು ಎಂದರು.
ಕೊಯಿಲದಲ್ಲಿ ಪಾದಯಾತ್ರೆ
ಕೊಯಿಲ ಗೋಕುಲನಗರದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅಲ್ಲಿಂದ ರಾಜ್ಯ ಹೆದ್ದಾರಿ ಮೂಲಕ ಘೋಷಣೆಗಳನ್ನು ಕೂಗುತ್ತಾ ಕೊಯಿಲ ಗ್ರಾಮ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು.
ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಮಾತನಾಡಿದರು. ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ, ಲಕ್ಷ್ಮೀನಾರಾಯಣ ರಾವ್ ಆತೂರು, ಶೀನಪ್ಪ ಗೌಡ ವಳಕಡಮ, ಧರ್ಮಪಾಲ ರಾವ್ ಕಜೆ, ಯದುಶ್ರೀ ಆನೆಗುಂಡಿ, ಜಯಂತಿ ಆರ್. ಗೌಡ, ಹೇಮಾ ಮೋಹನದಾಸ್ ಶೆಟ್ಟಿ, ಪುಷ್ಪಾ ಸುಭಾಷ್ ಶೆಟ್ಟಿ, ಬಾಲಕೃಷ್ಣ ಬೇಂಗದಪಡ್ಪು, ಭವಾನಿಶಂಕರ ಗೌಡ ಪರಂಗಾಜೆ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಕಾಶ್ ಕೆಮ್ಮಾರ ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಟನಾ ಸಭೆಯ ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.









