ಪುತ್ತೂರು: 70ನೇ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಡಿಸೆಂಬರ್ನಲ್ಲಿ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಚಾಂಪಿಯನ್ಶಿಪ್ಗೆ 17ರ ವಯೋಮಾನದ ಬಾಲಕಿಯರ ಕರ್ನಾಟಕ ರಾಜ್ಯ ತಂಡದ ತರಬೇತುದಾರರಾಗಿ ಬಾಲಕೃಷ್ಣ ರೈ ಪೊರ್ದಾಲ್ ಅವರು ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರಿನ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬಾಲಕೃಷ್ಣ ರೈ ಅವರು ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಸಾ
ಇವರ ತರಬೇತಿಯಲ್ಲಿ ಶಾಲೆಯ ಕಬಡ್ಡಿ ತಂಡವು ಎಂಟು ಬಾರಿ ಜಿಲ್ಲಾಮಟ್ಟ, ಐದು ಬಾರಿ ವಿಭಾಗಮಟ್ಟ ಹಾಗೂ ಐದು ಬಾರಿ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದೆ. ಸತತ ನಾಲ್ಕನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಅಲ್ಲದೆ, ಸತತ ನಾಲ್ಕನೇ ಬಾರಿಗೆ ಕರ್ನಾಟಕ ರಾಜ್ಯ ಕಬಡ್ಡಿ ತಂಡದ ತರಬೇತುದಾರರಾಗಿಯೂ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಮಾರ್ಗದರ್ಶನದಲ್ಲಿ 10ಕ್ಕೂ ಅಧಿಕ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ನಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ತ್ರೋಬಾಲ್ ತಂಡವೂ ಸತತ ನಾಲ್ಕು ಬಾರಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಹಾಗೂ ಪುತ್ತೂರು ತಾಲೂಕು ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟಗಳ ಸಂಘಟನೆಯಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.
ಬಹುಮುಖ ಸೇವೆಗೆ ಗೌರವ
ಸಾವಿರಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿರುವ ಇವರು, ಸಾಮಾನ್ಯ ಕಾರ್ಯಕ್ರಮಗಳಿಂದ ಹಿಡಿದು ಮುಖ್ಯಮಂತ್ರಿಗಳ ಕಾರ್ಯಕ್ರಮಗಳವರೆಗೆ ನಿರೂಪಣೆ ಮಾಡಿದ್ದಾರೆ. ‘ಡ್ರಗ್ಸ್ ಮುಕ್ತ ಯುವ ಸಮಾಜ’ ಎಂಬ ವಿಷಯದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ 250ಕ್ಕೂ ಅಧಿಕ ಶಾಲಾ-ಕಾಲೇಜುಗಳಲ್ಲಿ ಉಚಿತ ಜಾಗೃತಿ ತರಬೇತಿ ನೀಡಿದ್ದಾರೆ.
ರೋಟರಿ ಮತ್ತು ಲಯನ್ಸ್ ಕ್ಲಬ್ಗಳ ಮೂಲಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಇವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಉತ್ತಮ ಸ್ಕೌಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 50ಕ್ಕೂ ಅಧಿಕ ಸಂಘ-ಸಂಸ್ಥೆಗಳಿಂದ ಸನ್ಮಾನ ಮತ್ತು ಗೌರವಾದರಗಳಿಗೆ ಪಾತ್ರರಾಗಿದ್ದಾರೆ. ಕಳೆದ ಸಾಲಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಕ್ರೀಡೆ, ಶಿಕ್ಷಣ, ಸಾಮಾಜಿಕ ಜಾಗೃತಿ ಹಾಗೂ ಸಂಘಟನಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಗಾಗಿ ಬಾಲಕೃಷ್ಣ ರೈ ಪೊರ್ದಾಲ್ ಅವರ ಈ ಆಯ್ಕೆಗೆ ಅಭಿನಂದನೆಗಳು ವ್ಯಕ್ತವಾಗಿವೆ.








