ಬೆಳ್ತಂಗಡಿ: ಇಲ್ಲಿನ ಚರ್ಚ್ ರೋಡ್‌ನಲ್ಲಿ ನ.11ರ ಮುಂಜಾನೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ನಾವೂರು ನಿವಾಸಿ ಸಂತೋಷ್ (32) ಮೃತಪಟ್ಟಿದ್ದಾರೆ. ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅವರು, ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ, ಸುವರ್ಣ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ (33) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ನಿದ್ದೆ ಮಂಪರು ಕಾರಣ?
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ಗೂಡ್ಸ್ ವಾಹನವು, ಗುರುವಾಯನಕೆರೆ ಕಡೆಗೆ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗೂಡ್ಸ್ ವಾಹನದ ಚಾಲಕನಿಗೆ ನಿದ್ದೆ ಮಂಪರು ಬಂದಿರುವುದೇ ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೂಡ್ಸ್ ವಾಹನದ ಮುಂಭಾಗವೂ ತೀವ್ರವಾಗಿ ಹಾನಿಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









