ಪುತ್ತೂರು: ಮತದಾರರ ಪಟ್ಟಿ ಪರಿಷ್ಕರಣೆಯ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಸಂಬಂಧಪಟ್ಟ ಚುನಾವಣಾಧಿಕಾರಿಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ನ.13ರಂದು ಸಂಜೆ 4 ಗಂಟೆಗೆ ಕುಂಬ್ರ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಎಸ್‌ಕೆಎಸ್‌ಎಸ್‌ಎಫ್ ಕುಂಬ್ರ ವಲಯ ಕೋಶಾಧಿಕಾರಿ ಅಬ್ದುಲ್ ಸಲಾಮ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನವು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕನ್ನು ಖಾತರಿಪಡಿಸಿದೆ. ಆದರೆ, ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯು ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎಸ್‌ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿಲ್ಲ. ಆದರೆ, ಯಾವುದೇ ಕಾರಣವಿಲ್ಲದೆ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶ ಈ ಪ್ರಕ್ರಿಯೆಯಲ್ಲಿರಬಾರದು. ಪ್ರಸ್ತುತ ನಡೆಯುತ್ತಿರುವ ಪ್ರಕ್ರಿಯೆಯಲ್ಲಿ ಹಲವರಿಗೆ ಅನ್ಯಾಯವಾಗುವ ಸಾಧ್ಯತೆಗಳಿವೆ ಎಂದು ಆರೋಪಿಸಿದರು.
ಈ ಹಿನ್ನೆಲೆಯಲ್ಲಿ ಎಸ್‌ಕೆಎಸ್‌ಎಸ್‌ಎಫ್ ಕರ್ನಾಟಕ ರಾಜ್ಯ ಸಮಿತಿಯು ರಾಜ್ಯದ 100 ತಾಲೂಕು ಕೇಂದ್ರಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಭಾಗವಾಗಿ ಪುತ್ತೂರು ತಾಲೂಕಿನ ಕುಂಬ್ರ ಜಂಕ್ಷನ್‌ನಲ್ಲೂ ಪ್ರತಿಭಟನೆ ನಡೆಯಲಿದೆ. ಪ್ರತಿಭಟನಾ ಸಭೆಯಲ್ಲಿ ಅಮಳ ರಾಮಚಂದ್ರ ಭಟ್, ಮಹಮ್ಮದ್ ಬಡಗನ್ನೂರು, ನಹೀಮ್ ಪೈಝಿ ಮುಕ್ವೆ ಹಾಗೂ ಕೆ.ಎಚ್. ಮುಹಮ್ಮದ್ ಮುಖ್ಯ ಭಾಷಣ ಮಾಡಲಿದ್ದಾರೆ.
ಎಸ್‌ಕೆಎಸ್‌ಎಸ್‌ಎಫ್‌ನ 18 ಯುನಿಟ್‌ಗಳು ಹಾಗೂ 5 ಕ್ಲಸ್ಟರ್‌ಗಳ ಸದಸ್ಯರು ಸೇರಿದಂತೆ ಸಾವಿರಾರು ಮಂದಿ, ಸಮಾನಮನಸ್ಕರು ಹಾಗೂ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್‌ಕೆಎಸ್‌ಎಸ್‌ಎಫ್ ಕುಂಬ್ರ ವಲಯ ಅಧ್ಯಕ್ಷ ಸಿದ್ದಿಕ್ ಸುಲ್ತಾನ್, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಸ್ಸಲಾಮಿ ಹಾಗೂ ವರ್ಕಿಂಗ್ ಸೆಕ್ರೆಟರಿ ಯುಸೂಫ್ ಸ್ವಾದ್ ಪೈಝಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!