ಕಡಬ: ಕಡಬ ತಾಲೂಕಿನ ಅಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ಕಾರು ಮತ್ತು ಮಹೇಂದ್ರ ಜೀತಾ ವಾಹನದ ನಡುವೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ KA-21-MA-8490 ನೋಂದಣಿಯ ಕಾರು, ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ಹಣ್ಣುಹಂಪಲು ಸಾಗಿಸುತ್ತಿದ್ದ KA-21-B-2940 ನೋಂದಣಿಯ ಮಹೇಂದ್ರ ಜೀತಾ ವಾಹನಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಮಹೇಂದ್ರ ಜೀತಾ ವಾಹನದ ಚಾಲಕ ಖಲೀಲ್, ಸಹ ಪ್ರಯಾಣಿಕ ತಮೀಮ್ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಈ ವೇಳೆ ಮಹೇಂದ್ರ ಜೀತಾ ವಾಹನದ ಸಹ ಪ್ರಯಾಣಿಕ ತಮೀಮ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 138/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281, 125(a), 106ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.









