ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪಣಂಬೂರು ಪೊಲೀಸರು ರೆಸ್ಟೋರೆಂಟ್‌ಗೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲು ಹಾಗೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲು ಅಗತ್ಯ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.
ಪಣಂಬೂರು ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.









