ಮಂಗಳೂರು: 2005ರಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ಕೊಲೆಯಾದ ಪೊಳಲಿ ಅನಂತು ಅವರ ಶವ ಮೆರವಣಿಗೆಯ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಅವರ ಅಪರಾಧ ತಂಡ ಬಂಧಿಸಿದೆ.
ಬಂಧಿತನನ್ನು ಮನೋಜ್ (44), ಕೃಷ್ಣ ಪೂಜಾರಿ ಅವರ ಪುತ್ರ ಎಂದು ಗುರುತಿಸಲಾಗಿದೆ.
2005ರಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಮನೋಜ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2007ರಲ್ಲಿ ವಿಚಾರಣೆ ಆರಂಭವಾಗಿತ್ತು. ಆದರೆ, ಆರೋಪಿ 2007ರಲ್ಲಿ ವಿದೇಶಕ್ಕೆ ತೆರಳಿದ್ದು, ಬಳಿಕ ವಿದೇಶದಿಂದ ಮರಳಿದ ನಂತರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಕೃಷ್ಣಬೆಟ್ಟು ಹೌಸ್‌ನಲ್ಲಿ ವಾಸವಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಒಂದು ಪ್ರಕರಣದಲ್ಲಿ ಎಲ್‌ಪಿಸಿ ನಂ. 26/2016 ಹಾಗೂ ಮತ್ತೊಂದು ಪ್ರಕರಣದಲ್ಲಿ ಎಲ್‌ಪಿಸಿ ನಂ. 50/2016ರಂತೆ ವಾರಂಟ್ ಹೊರಡಿಸಿತ್ತು.
ನವೆಂಬರ್ 14ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಅವರ ಅಪರಾಧ ತಂಡವು ಕಾರ್ಕಳದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.









