ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಲಣೆ ಎಂಬಲ್ಲಿ ನಡೆದಿದೆ.
ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. (14) ಮೃತಪಟ್ಟ ಬಾಲಕ. ಈತ ಸ್ಥಳೀಯ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ನ.14ರಂದು ರಾತ್ರಿ ಸುಮಾರು 9 ಗಂಟೆಗೆ ಸುಚಿನ್ ಬೈಕ್‌ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದಾಗ ಕಲ್ಲಣೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.15ರ ಬೆಳಗ್ಗೆ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









