ಬಂಟ್ವಾಳ: ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಯೊಬ್ಬರಿಂದ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸುವ ಸಲುವಾಗಿ 2026ರ ಆಗಸ್ಟ್ 20ರಂದು ಬೈಕ್‌ನಲ್ಲಿ ತೆರಳಿದ್ದರು. ವಿವಿಧ ಅಂಗಡಿಗಳಿಂದ ನಗದು ಸಂಗ್ರಹಿಸಿ ಬಂಟ್ವಾಳದ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬರುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ತಲವಾರು ತೋರಿಸಿ ಬೆದರಿಸಿ ಅವರ ಬಳಿಯಿದ್ದ ₹8.35 ಲಕ್ಷ ನಗದು ದರೋಡೆಗೈದು ಪರಾರಿಯಾಗಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬವರನ್ನು ನವೆಂಬರ್ 11ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪ್ರಕರಣದ ವಿಚಾರಣೆಗಾಗಿ ಮೂವರು ಆರೋಪಿಗಳನ್ನು ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆರೋಪಿಗಳಿಂದ ₹2,01,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ಆರೋಪಿ ಪ್ರವಿತ್ ರಾಜ್ ಶೆಟ್ಟಿಯ ಗುರುತು ಪತ್ತೆ ಪರೇಡ್ ನಡೆಸಲಾಗಿದ್ದು, ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.









