ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಸಾರ್ವಜನಿಕ ಸನ್ಮಾನ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಕೆಪಿಸಿಸಿ ಸಂಯೋಜಕ, ಹಿರಿಯ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಸಾಮಾಜಿಕ, ರಾಜಕೀಯ, ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಗಳಲ್ಲಿ 45 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಸಲೀಂ ಅಹ್ಮದ್ ಅವರು ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ 18ನೇ ವಯಸ್ಸಿನಲ್ಲಿ ಸಾರ್ವಜನಿಕ ಜೀವನ ಪ್ರವೇಶಿಸಿದ ಅವರು, ಕಾಂಗ್ರೆಸ್ ಪಕ್ಷದ ಮೂಲಕ ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಜ್ಯದ ಜನತೆಗೆ ಸೇವೆ ಸಲ್ಲಿಸಿದ್ದಾರೆ.
ವಿಧಾನಸಭೆ, ವಿಧಾನ ಪರಿಷತ್, ಸಚಿವ ಸಂಪುಟ ಹಾಗೂ ಕೆಪಿಸಿಸಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಅವರು, 2026ರಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆ, ಕರಾವಳಿ ಭಾಗ ಹಾಗೂ ಇಡೀ ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಇದು ವ್ಯಕ್ತಿಯೊಬ್ಬರ ಸನ್ಮಾನವಲ್ಲ, 45 ವರ್ಷಗಳ ನಿಷ್ಕಳಂಕ ಜನಸೇವೆಗೆ ಸಲ್ಲಿಸುವ ಗೌರವವಾಗಿದೆ ಎಂದು ನೂರುದ್ದೀನ್ ಸಾಲ್ಮರ ತಿಳಿಸಿದ್ದಾರೆ.
ಪಕ್ಷಭೇದ ಮರೆತು, ಜಾತಿ-ಧರ್ಮಗಳ ಭೇದವಿಲ್ಲದೆ ಸಲೀಂ ಅಹ್ಮದ್ ಅವರ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಹಿತಿಗಳು, ಶಿಕ್ಷಣ ತಜ್ಞರು, ನ್ಯಾಯವಾದಿಗಳು, ಯುವಕರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಕಾರ್ಯಕ್ರಮದ ವಿವರ:
ದಿನಾಂಕ: ನವೆಂಬರ್ 23, 2026, ಸೋಮವಾರ
ಸಮಯ: ಬೆಳಿಗ್ಗೆ 11 ಗಂಟೆಯಿಂದ
ಸ್ಥಳ: ಕುದ್ಮುಲ್ ರಂಗರಾವ್ ಟೌನ್ ಹಾಲ್, ಮಂಗಳೂರು
ಆಯೋಜನೆ: ಸಾರ್ವಜನಿಕ ಸನ್ಮಾನ ಸಮಿತಿ, ಮಂಗಳೂರು
ಈ ಐತಿಹಾಸಿಕ ಸಮಾರಂಭದಲ್ಲಿ ಎಲ್ಲರೂ ಭಾಗವಹಿಸಿ ಸಲೀಂ ಅಹ್ಮದ್ ಅವರ ದೀರ್ಘಕಾಲದ ಜನಸೇವೆಯನ್ನು ಗೌರವಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ನೂರುದ್ದೀನ್ ಸಾಲ್ಮರ ಕರೆ ನೀಡಿದ್ದಾರೆ.









