ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ), ಪುತ್ತೂರು ಆಶ್ರಯದಲ್ಲಿ 37ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್ ನ.20ರಿಂದ 22ರವರೆಗೆ ಪುತ್ತೂರಿನ ಬಾಲವನ ಈಜುಕೊಳದಲ್ಲಿ ನಡೆಯಲಿದೆ.
ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ 200ಕ್ಕೂ ಅಧಿಕ ಈಜುಪಟುಗಳು ಪಾಲ್ಗೊಳ್ಳಲಿದ್ದಾರೆ. ಪುತ್ತೂರಿನಲ್ಲಿ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ ಆಯೋಜನೆಯಾಗುತ್ತಿರುವುದು ಕ್ರೀಡಾಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ನ.20ರಂದು ಸಂಜೆ 6ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅಧ್ಯಕ್ಷತೆ ವಹಿಸಲಿದ್ದು, ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ. ಮನೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ನ.22ರಂದು ಬೆಳಿಗ್ಗೆ 11.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಬ್ಯಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವೇಕಾನಂದ ಬಿ.ಎಡ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ವಸಂತಿ ಕೆ. ಹಾಗೂ ಲಿಟಲ್ ಏಂಜಲ್ಸ್ ಪ್ರೀ ಸ್ಕೂಲ್‌ನ ಸಂಸ್ಥಾಪಕಿ ಪ್ರತಿಭಾ ಹೆಗ್ಡೆ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು, ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ವಿದ್ಯಾವರ್ಧಕ ಸಂಘದ ವಿವಿಧ ಸಂಸ್ಥೆಗಳಲ್ಲಿ ಕಲ್ಪಿಸಲಾಗಿದೆ. ಮಂಗಳೂರಿನ ರೈಲು ನಿಲ್ದಾಣದಿಂದ ಪುತ್ತೂರಿಗೆ ಆಗಮಿಸಲು ಹಾಗೂ ಮರಳಿ ತೆರಳಲು ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗಿದೆ.
ಈಜು ಕ್ರೀಡೆಯ ಮೂಲಕ ದೈಹಿಕ ಸಾಮರ್ಥ್ಯ, ಮಾನಸಿಕ ದೃಢತೆ ಹಾಗೂ ಏಕಾಗ್ರತೆ ಬೆಳೆಸುವ ಉದ್ದೇಶದಿಂದ ಆಯೋಜಿಸಿರುವ ಈ ಚಾಂಪಿಯನ್‌ಶಿಪ್ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.









