ಪುತ್ತೂರು: ಬೈಪಾಸ್ ರಸ್ತೆಯ ದರ್ಬೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವರು ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನ.19ರ ನಸುಕಿನ ಜಾವ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ಅರ್ಮುಗಂ (85) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಾಜನ್ ಎಂಬವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರು ಚಾಲಕ ಮಣಿಕಂಠ ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ KA-12-MB-1407 ನೋಂದಣಿಯ ಎರ್ಟಿಗಾ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಾಲಕನ ನಿದ್ರೆ ಮಂಪರು ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









