ಬೆಳ್ತಂಗಡಿ: ಆಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಮಾಲೀಕರ ಗಮನಕ್ಕೆ ಬಾರದಂತೆ ಸುಮಾರು ₹4.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದಿದೆ.
ಮಡಂತ್ಯಾರು ನಿವಾಸಿ ರಾಜೇಶ್ (43) ಎಂಬವರಿಗೆ ಸೇರಿದ ಜ್ಯುವೆಲ್ಲರಿ ಅಂಗಡಿಯಲ್ಲಿ ನ.16ರಂದು ಸಂಜೆ ಈ ಘಟನೆ ನಡೆದಿದೆ. ಆಭರಣ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಸುಮಾರು 35 ಗ್ರಾಂ ತೂಕದ ₹4.40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಮಾಲೀಕರ ಗಮನಕ್ಕೆ ಬಾರದಂತೆ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಮರುದಿನ ಬೆಳಿಗ್ಗೆ ಅಂಗಡಿಯಲ್ಲಿ ಚಿನ್ನಾಭರಣಗಳನ್ನು ಜೋಡಿಸುವ ವೇಳೆ ಆಭರಣಗಳು ಕಾಣೆಯಾಗಿರುವುದು ಮಾಲೀಕರ ಗಮನಕ್ಕೆ ಬಂದಿದೆ. ಈ ಕುರಿತು ರಾಜೇಶ್ ಅವರು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 303(2) ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.









