ಮಂಗಳೂರು:ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ, ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಐಪಿಸಿ ಕಲಂ 376, 448, 323, 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ತನಿಖಾಧಿಕಾರಿಗಳು ಹಾಗೂ ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಜೇಶ ಮಾರುತಿ ಕಾಮಟೆ ಅವರು 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.








