ಪುತ್ತೂರು: ಗ್ರಾಮಗಳು ದೇಶದ ಬೆನ್ನೆಲುಬು. ಗ್ರಾಮೀಣ ಪ್ರದೇಶಗಳ ಮೂಲಭೂತ ಬೇಡಿಕೆಗಳು ಈಡೇರಿದಾಗ ಮಾತ್ರ ದೇಶ ಸಮಗ್ರ ಅಭಿವೃದ್ಧಿ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಮಂಗಳವಾರ ಪೆರ್ನೆ ಗ್ರಾಮದ ವಡ್ಯದಗಯದಲ್ಲಿ ₹2.40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ವಡ್ಯದಗಯದಲ್ಲಿರುವ ಸೇತುವೆ ಈ ಭಾಗದ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಕಿರಿದಾದ ಸೇತುವೆ ಶಿಥಿಲಗೊಂಡಿದ್ದರೂ ಹೊಸ ಸೇತುವೆ ನಿರ್ಮಾಣವಾಗಿರಲಿಲ್ಲ. ಕಳೆದ ಆಗಸ್ಟ್ ತಿಂಗಳಲ್ಲಿ ಸ್ಥಳೀಯರು ಸೇತುವೆ ನಿರ್ಮಾಣದ ಬೇಡಿಕೆಯೊಂದಿಗೆ ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಗ್ರಾಮದ ಜನರ ಪ್ರಮುಖ ಬೇಡಿಕೆಯನ್ನು ಮನಗಂಡು ಸರ್ಕಾರದ ಮೂಲಕ ₹2.40 ಕೋಟಿ ಅನುದಾನ ಮಂಜೂರು ಮಾಡಿಸುವ ಮೂಲಕ ಅವರ ಬಹುದಿನಗಳ ಕನಸನ್ನು ನನಸು ಮಾಡಿದ್ದೇನೆ ಎಂದರು.
ಪೆರ್ನೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಗ್ರಾಮದ ಹಿರಿಯರು ಹಾಗೂ ವಿದ್ಯಾವಂತರು ಕಾಂಗ್ರೆಸ್ ಕಡೆಗೆ ಒಲವು ತೋರುತ್ತಿದ್ದಾರೆ. ಶಾಸಕ ಅಶೋಕ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿಯ ಪ್ರಮುಖರೂ ಅವರೊಂದಿಗೆ ಕೈಜೋಡಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಅವರು ಅತ್ಯಧಿಕ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಹೇಳಿದರು.
ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ವಿರೋಧ ಪಕ್ಷಗಳು ಚಡಪಡಿಸುತ್ತಿವೆ ಎಂದು ಅವರು ಆರೋಪಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು, ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಲಯ ಅಧ್ಯಕ್ಷ ಅಬ್ದುಲ್ ಶಾಫಿ, ಉಪ್ಪಿನಂಗಡಿ ಬ್ಲಾಕ್ ಕಾರ್ಯಾಧ್ಯಕ್ಷ ವಿಕ್ರಂ ಶೆಟ್ಟಿ, ಕಾರ್ಯದರ್ಶಿ ಶಿವಪ್ರಸಾದ್ ಕೋಟಿಂಬಾಡಿ, ರಾಜೇಶ್ ಶೆಟ್ಟಿ, ಸುಂದರ ಮಲ್ಲಡ್ಕ, ಅಬ್ದುಲ್ ರಝಾಕ್, ಮಿತ್ರದಾಸ್ ರೈ, ಬೂತ್ ಅಧ್ಯಕ್ಷ ಪುಷ್ಕರ ಪೂಜಾರಿ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ರೋಶನ್ ರೈ ಬನ್ನೂರು, ಗ್ಯಾರಂಟಿ ಸಮಿತಿ ಸದಸ್ಯ ಅಬ್ಬು ನವಗ್ರಾಮ ಮತ್ತಿತರರು ಉಪಸ್ಥಿತರಿದ್ದರು.









