ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಪೂರ್ಣಗೊಂಡಿದ್ದು, ಬಹುತೇಕ ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳ ಒಟ್ಟು 1,101 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದರು.
2022ರಲ್ಲಿಯೇ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಆಡಳಿತಾವಧಿ ಪೂರ್ಣಗೊಂಡಿತ್ತು. ಆದರೆ ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಕೆಲವು ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿದ್ದು, ಕೆಲವು ಗ್ರಾಮ ಪಂಚಾಯಿತಿ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗಿವೆ. ಹೀಗಾಗಿ ಕ್ಷೇತ್ರಗಳ ಪುನರ್ ವಿಂಗಡಣೆ ಅನಿವಾರ್ಯವಾಗಿದ್ದರಿಂದ ಚುನಾವಣೆ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ತನ್ನ ಕರ್ತವ್ಯವನ್ನು ನಿರ್ವಹಿಸಿದ್ದು, ಇದೀಗ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಚುನಾವಣೆ ನಡೆಸಲಿದೆ. ಬಹುತೇಕ ಜನವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಕಾಂಗ್ರೆಸ್ ಪಕ್ಷ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎದುರಿಸಲು ಸಂಪೂರ್ಣ ಸಜ್ಜಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.









