ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ದುರ್ಗಾ ಸಿಂಗ್ ಅವರು ತಮ್ಮ ಕಾರಿನಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿದ್ದ ಪ್ರಕರಣ
ಈ ಪ್ರಕರಣದ ವಿಚಾರ ನ. 5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡದೆ ನುಣುಚಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನ ಮೊದಲು ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಜೀವ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ಬಳಿಕ ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಲೈಂಗಿಕ ದೌರ್ಜನ್ಯ, ವಿಡಿಯೋ ಹರಿಬಿಡುವ ಬೆದರಿಕೆ ಹಾಗೂ ಜೀವ ಬೆದರಿಕೆಯ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆ ಮುಂದುವರಿದಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ತಿಳಿದುಬರಬೇಕಿದೆ.









