ಪುತ್ತೂರು: ಪತ್ನಿಯನ್ನು ಕೊಲೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿತ ಪತಿಗೆ ನ್ಯಾಯಾಲಯ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.2024ರ ಡಿ.11ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದಿರುವುದಾಗಿ ಆಕೆಯ ಪತಿ ಸಂಜೀವ ನಾಯ್ಕ ನೆರೆಮನೆಯವರಿಗೆ ತಿಳಿಸಿದ್ದ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದರು.ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿತ್ತು. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 184/2024ರಂತೆ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 103(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಮೃತ ಮಹಿಳೆಯ ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.ಶಿಕ್ಷೆಯ ವಿವರ:ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 105ರ ಭಾಗ 2ರ ಅಡಿಯಲ್ಲಿ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹5,000 ದಂಡ.ದಂಡ ಪಾವತಿಸದಿದ್ದಲ್ಲಿ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ.BNS ಸೆಕ್ಷನ್ 240ರ ಅಡಿಯಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ.ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.









