ಪುತ್ತೂರು: ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆ ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಅದನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.ನ.24ರಂದು ಕಬಕ ಜಂಕ್ಷನ್‌ನಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಆಯೋಜಿಸಿದ್ದ ಜಂತರ್ ಮಂತರ್ ಮಾದರಿಯ ಪ್ರತಿಭಟನಾ ಧರಣಿಯಲ್ಲಿ ಅವರು ಮಾತನಾಡಿದರು.ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಪ್ರಜಾಪ್ರಭುತ್ವದ ಮೂಲ ಆಶಯವಾದ ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅರ್ಹ ಮತದಾರರಿಗೆ ಯಾವುದೇ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಯಂಗ್ ಡೆಮಾಕ್ರಟ್ಸ್ ಕೇರಳ ರಾಜ್ಯ ಸಮಿತಿ ಸದಸ್ಯ ಅಹ್ಮದ್ ನಿಸಾರ್ ಮಾತನಾಡಿ, ಸಂಘಪರಿವಾರದ ರಾಜಕೀಯ ನಿಲುವುಗಳು ಹಾಗೂ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವ ಅಗತ್ಯವಿದೆ. ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು ಎಂದರು.ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಅಡ್ವೊಕೇಟ್ ಮಜೀದ್ ಖಾನ್ ಮಾತನಾಡಿ, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಖಾತರಿಯಾಗಬೇಕು. ಮತದಾರರ ಪಟ್ಟಿಯಲ್ಲಿ ಉಂಟಾಗಬಹುದಾದ ಲೋಪಗಳನ್ನು ತಡೆಯುವ ನಿಟ್ಟಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.WIM ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಮಾನವಾಗಿ ದೊರೆಯಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.ಮತದಾನ ವಂಚನೆ, ಬೆಲೆ ಏರಿಕೆ ವಿರುದ್ಧ ಆಕ್ರೋಶಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಹೆನ್ರಿ ಡಿಸೋಜಾ ಮಾತನಾಡಿ, ಮತದಾನದ ಹಕ್ಕನ್ನು ಕಸಿಯುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು. ಹಕ್ಕಿಗಾಗಿ ಹೋರಾಡುವವರನ್ನು ಜೈಲಿಗೆ ಹಾಕುವ ಪ್ರಯತ್ನ ಖಂಡನೀಯ ಎಂದರು.ಮತದಾನ ವಂಚನೆಯ ಆರೋಪ ಎದುರಿಸುತ್ತಿರುವ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಮಾಜಸೇವಕ ಹರೇಕಳ ಹಾಜಬ್ಬ ಅವರ ಹೆಸರೇ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ಸುಮಾರು 13 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲಾಗಿದೆ ಎಂಬ ಆರೋಪ ಆತಂಕಕಾರಿ ಎಂದರು.ಅಗತ್ಯ ವಸ್ತುಗಳ ಬೆಲೆ ಏರಿಕೆ, ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಹಾಗೂ ಪ್ರವೇಶ ಶುಲ್ಕ ವಸೂಲಾತಿಯ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಪುತ್ತೂರು ಕ್ಷೇತ್ರಾಧ್ಯಕ್ಷ ಅಶ್ರಫ್ ಬಾವು ವಹಿಸಿದ್ದರು.ವೇದಿಕೆಯಲ್ಲಿ ಎಸ್‌ಡಿಟಿಯು ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಮೀದ್ ಸಾಲ್ಮರ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ ಮತ್ತು ಶಾಕಿರ್ ಅಲಕೆಮಜಲು, ಉಪಾಧ್ಯಕ್ಷ ಇನಾಸ್ ರೊಡ್ರಿಗಸ್, ಸದಸ್ಯ ಸಿದ್ದೀಕ್ ಅಲೆಕ್ಕಾಡಿ, ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಸದಸ್ಯರಾದ ಹಮ್ದಾ ಮೆಲ್ಕಾರ್ ಮತ್ತು ಹಮೀದ್ ಪುತ್ತೂರು, ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಪುತ್ತೂರು ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯಿಲ್ ಕೆಮ್ಮಾಯಿ ಉಪಸ್ಥಿತರಿದ್ದರು.ಪ್ರತಿಭಟನೆಯಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಸಿರಾಜ್ ಕೂರ್ನಡ್ಕ ಮತ್ತು ತಂಡ ಎಸ್‌ಐಆರ್ ವಿರೋಧಿ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆಗೆ ಧ್ವನಿಗೂಡಿಸಿದರು.ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಪುತ್ತೂರು ನಗರ ಸಮಿತಿ ಅಧ್ಯಕ್ಷ ತಾಜುದ್ದೀನ್ ಸಾಲ್ಮರ ವಂದಿಸಿದರು. ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಕಾರ್ಯಕ್ರಮ ನಿರೂಪಿಸಿದರು.









