ಪುತ್ತೂರು: ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ಮಂಡ್ಯ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 31-35 ಅಂಕಗಳ ಅಂತರದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಶಾಲೆಯ ಐವರು ವಿದ್ಯಾರ್ಥಿನಿಯರು ಸತತ 5ನೇ ಬಾರಿಗೆ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಉಪನಿರ್ದೇಶಕರ ಕಚೇರಿ ಹಾಗೂ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ, ಕ್ಯಾಂಬ್ರಿಡ್ಜ್ ವಿದ್ಯಾಸಂಸ್ಥೆಯ ಸಹಕಾರದೊಂದಿಗೆ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ ಉಮ್ಮು ನಿಧಾ ಅತ್ಯುತ್ತಮ ರೈಡರ್ ಪ್ರಶಸ್ತಿ ಪಡೆದುಕೊಂಡಿದ್ದು, ರೂ. 2,500 ನಗದು ಬಹುಮಾನ ಗಳಿಸಿದ್ದಾರೆ.ಉದ್ವಿತಾ ರಕ್ಷಾ, ಯಶಸ್ವಿ ಪಿ., ಖುಷಿ, ಜ್ಞಾನವಿ, ಪ್ರಾಪ್ತ, ದಿಶಾ ಕೆ., ಆಲಿಯಾ, ಅಸೀಲಾ, ಹರ್ಷಿತ ಹಾಗೂ ರೋಶಲ್ ಡಿಸೋಜ ತಂಡದಲ್ಲಿ ಭಾಗವಹಿಸಿದ್ದರು.ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಅವರ ಮಾರ್ಗದರ್ಶನದಲ್ಲಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ್ದಾರೆ.ವಿದ್ಯಾರ್ಥಿನಿಯರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.









