ಬೆಂಗಳೂರು, (ಸೆಪ್ಟೆಂಬರ್ 30): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಅವರು ಸೈಟ್ ಹಿಂದಿರುಗಿಸಲು ತೀರ್ಮಾನಿಸಿದ್ದಾರೆ. ಸೈಟ್ ವಾಪಸ್ ನೀಡುವ ಬಗ್ಗೆ ಖುದ್ದು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದಾರೆ. ಇನ್ನು ಪತ್ನಿಯ ಈ ನಿರ್ಧಾರಕ್ಕೆ ಸ್ವತಃ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನನ್ನ ಪತ್ನಿ ನೊಂದು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ನನ್ನ ಪತ್ನಿಯ ನಿರ್ಧಾರ ನನಗೂ ಆಶ್ಚರ್ಯ ಉಂಟು ಮಾಡಿದೆ ಎಂದಿದ್ದಾರೆ.

ಸೈಟ್ ವಾಪಸ್ ನೀಡುವ ಬಗ್ಗೆ ಪತ್ನಿ ಕೈಗೊಂಡ ನಿರ್ಧಾರದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಹೇಳಿದ್ದಾರೆ.ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!