
ಮುಂಬೈ: ಮಹಾರಾಷ್ಟ್ರದ ರಾಜಕೀಯ ಧುರೀಣ, ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದೆ.
66 ವರ್ಷದ ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಿಗೆ ಶನಿವಾರ (ಅ.12) ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿ ಅವರ ಮಗನ ಕಚೇರಿ ಬಳಿ ಗುಂಡಿಕ್ಕಲಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅವರು ಬದುಕುಳಿಯಲಿಲ್ಲ.
ಇಬ್ಬರು ಬಂಧಿತ ಆರೋಪಿಗಳನ್ನು ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಅವರು ಪ್ರಸ್ತುತ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಕ್ರೈಂ ಬ್ರಾಂಚ್ ಮೂಲಗಳು ತಿಳಿಸಿವೆ.
ಕೊಲೆಗೆ ಮೊದಲು ಸುಮಾರು 25ರಿಂದ 30 ದಿನಗಳ ಕಾಲ ಅವರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಮೂಲಗಳ ಪ್ರಕಾರ ಮೂವರು ಆರೋಪಿಗಳು ಘಟನಾ ಸ್ಥಳಕ್ಕೆ ಆಟೋ ರಿಕ್ಷಾದಲ್ಲಿ ಆಗಮಿಸಿದ್ದರು. ಅಲ್ಲಿ ಕೆಲ ಸಮಯ ಕಾದು ಬಳಿಕ ಸಿದ್ದಿಕಿಗೆ ಗುಂಡು ಹಾರಿಸಿದ್ದರು. ಶೂಟರ್ ಗಳಿಗೆ ಮಾಹಿತಿ ರವಾನೆ ಮಾಡುತ್ತಿದ್ದ ಮತ್ತೊಬ್ಬ ಕೂಡಾ ಘಟನೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕಾರಾಗಿ ಆಯ್ಕೆಯಾಗಿದ್ದರು. ಮುಂಬೈನ ಪ್ರಮುಖ ವ್ಯಕ್ತಿಯಾಗಿದ್ದ ಅವರು 2004ರಿಂದ 2008ರವರೆಗೆ ವಿಲಾಸ್‌ರಾವ್ ದೇಶ್‌ಮುಖ್ ಸರ್ಕಾರದಲ್ಲಿ ಸಚಿವರಾಗಿದ್ದರು. ಈ ವರ್ಷದ ಫೆಬ್ರವರಿಯಲ್ಲಿ ಅವರು ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಅವರ ಎನ್ ಸಿಪಿಗೆ ಸೇರ್ಪಡೆಯಾಗಿದ್ದರು.
