ನ ವದೆಹಲಿ: ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಸಹೋದರ ಗೋಪಾಲ್ ಜೋಶಿ ಬಂಧನ ಪ್ರಕರಣಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಗೋಪಾಲ್ ಜೋಶಿ ವಿರುದ್ಧ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ನಿನ್ನೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಪ್ರಹ್ಲಾದ್ ಜೋಶಿ, ಸಹೋದರ ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ನಮ್ಮ ಸಂಪರ್ಕ, ಸಂಬಂಧವಿಲ್ಲ. ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು.

ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಸ್ಪಷ್ಟಪಡಿಸಿದರು.

ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದರು.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಬಂಧಿಸಬೇಕೆನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!