ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರೀ ಅವಘಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್‌ ಅವರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.

ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು ಎಂದಿದ್ದಾರೆ. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಇಲ್ಲಿಯ ವರೆಗೆ ಮೂರು ಜನ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್, ಸಚಿವ ಸಂತೋಷ್ ಲಾಡ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಕ್ಷಣಾ ಕೆಲಸ ಹಾಗೂ ಕಾರ್ಮಿಕರ ಬಗ್ಗೆ ವಿಚಾರಿಸಿದರು.

60/40 ಅಳತೆಯ ನಿವೇಶನದಲ್ಲಿ ಇಷ್ಟು ದೊಡ್ಡ ಕಟ್ಟಡವನ್ನು ಕಟ್ಟಿದ್ದಾರೆ. ಈ ರೀತಿ ಮಾಡುವುದು ಭಾರೀ ದೊಡ್ಡ ಅಪರಾಧ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಕೇವಲ ನೋಟಿಸ್‌ ಕೊಟ್ಟರೆ ಸಾಕಾಗಲ್ಲ. ಅದರ ಬದಲು ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ದುರಂತ ನಮಗೆ ದೊಡ್ಡ ಪಾಠವಾಗಿದೆ. ರಕ್ಷಣಾ ಕಾರ್ಯ ಮುಗಿದ ನಂತರ ಮುಂದಿನ ಎರಡು ದಿನಗಳ ಒಳಗಾಗಿ, ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಕ್ರಮ ಕಟ್ಟಡಗಳ ಸರ್ವೆ: ಬೆಂಗಳೂರಿನಲ್ಲಿರುವ ಅಕ್ರಮ ಕಟ್ಟಡಗಳ ಬಗ್ಗೆ ಸರ್ವೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು. ಕಟ್ಟಡ ವಿನ್ಯಾಸ ಇಲ್ಲದೆ ಇರುವವರಿಗೆ ಯಾವುದೇ ಕಾರಣಕ್ಕೂ ನೋಂದಣಿ ನೀಡಬಾರದು ಎಂದು ಕಂದಾಯ ಇಲಾಖೆಗೆ ಸೂಚನೆ ನೀಡಲಾಗುವುದು. ಕಡಿಮೆ ದುಡ್ಡಿಗೆ ನಿವೇಶನ ತೆಗೆದುಕೊಂಡು ಮಾರಾಟ ಮಾಡಲು ಈ ರೀತಿ ಮಾಡುವುದು ಇದೆ. ಈ ರೀತಿ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶಕ್ಕಾಗಿಯೇ ರೇರಾ ಕಾಯ್ದೆ ಜಾರಿಯಲ್ಲಿದೆ ಎಂದು ಅವರು ಹೇಳಿದರು.

ಕಟ್ಟಡದ ಅವಶೇಷಗಳಡಿ 21 ಜನ ಕಾರ್ಮಿಕರು: ಇನ್ನು ಕಟ್ಟಡದ ಅವಶೇಷಗಳ ಅಡಿಯಲ್ಲಿ 21 ಜನ ಕಾರ್ಮಿಕರರು ಸಿಲುಕಿದ್ದರು. ಅವರಲ್ಲಿ ಇಬ್ಬರು ಕಾರ್ಮಿಕರು ಮೃತ ಪಟ್ಟಿದ್ದಾರೆ. 14 ಜನರ ರಕ್ಷಣೆ ಮಾಡಲಾಗಿದೆ. ಇನ್ನು ಏಳು ಜನ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್‌ ಹೇಳಿದ್ದರು.

ಅಲ್ಲದೇ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡದವರು ಅತ್ಯಂತ ಸೂಕ್ಷ್ಮವಾಗಿ ಹಾಗೂ ವೇಗವಾಗಿ ರಕ್ಷಣಾ ಕೆಲಸ ಮಾಡುತ್ತಿದ್ದಾರೆ. ಆಂಧ್ರಪ್ರದೇಶ ಮತ್ತು ಬಿಹಾರ್ ರಾಜ್ಯದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಮೃತಪಟ್ಟಿರುವ ಒಬ್ಬ ಕಾರ್ಮಿಕರ ಗುರುತು ಸಿಕ್ಕಿದ್ದು, ಆತ ಬಿಹಾರದವರು ಎಂದು ತಿಳಿದು ಬಂದಿದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣ ಗುತ್ತಿಗೆದಾರ, ನಿವೇಶನದ ಮಾಲೀಕ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ರಕ್ಷಣೆ ಕಾರ್ಯ ಮುಗಿದ ನಂತರ ಕಾರ್ಮಿಕರಿಗೆ ಪರಿಹಾರವನ್ನು ಕೊಡಲಾಗುವುದು ಎಂದು ಸಹ ಹೇಳಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!