ಉಜಿರೆ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ನಮ್ಮೂರು ನಮ್ಮ ಕೆರೆ” ಯೋಜನೆಯಡಿ ಈಗಾಗಲೆ ರಾಜ್ಯದಲ್ಲಿ 800 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು, 2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ ನೀಡಲು ಉದ್ದೇಶಿಸಲಾಗಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು, ಡಿ.17ರಂದು ಇಲ್ಲಿನ ಧರ್ಮಶ್ರೀ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಈ ಯೋಜನೆಯಡಿಯಲ್ಲಿ ಪುನಶ್ಚೇತನಗೊಳಿಸಿದ 800ನೇ ಕೆರೆಯಾಗಿ ಚೌಡನಹಳ್ಳಿ ಕೆರೆಯನ್ನು ಮಾಜಿ ಶಾಸಕ ಲಿಂಗೇಶ್ ಅವರಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿ ಮಾತನಾಡಿದರು.

‘ಕೆರೆಗಳ ರಕ್ಷಣೆ ಮಾಡಿದರೆ ಪವಿತ್ರ ಗಂಗೆಯನ್ನು ರಕ್ಷಣೆ ಮಾಡಿದಷ್ಟೆ ಪುಣ್ಯ ಸಿಗುತ್ತದೆ. ಜಲ ಸಂರಕ್ಷಣೆ ಮತ್ತು ಸ್ವಚ್ಛಪರಿಸರ ರಕ್ಷಣಾ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು. ಕೆರೆಗಳಿಗೆ ಕಸ, ಕಲ್ಮಶ, ತ್ಯಾಜ್ಯವನ್ನು ಹಾಕಬಾರದು. ಕೆರೆಗಳಿಗೆ ಕಾಯಕಲ್ಪ ನೀಡುವುದು ತಮಗೆ ಅತ್ಯಂತ ಪ್ರಿಯವಾದ ಕಾಯಕವಾಗಿದ್ದು, ಕೆರೆಯ ಸುತ್ತಲೂ ಹಣ್ಣುಹಂಪಲಿನ ಗಿಡಗಳನ್ನು ಬೆಳೆಸಬೇಕು’ ಡಾ. ಹೆಗ್ಗಡೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

‘ಎಲ್ಲಾ ಕೆಲಸಗಳನ್ನು ಸರ್ಕಾರ, ಗ್ರಾಮಪಂಚಾಯಿತಿಯೇ ಮಾಡಬೇಕೆಂದು ನಿರೀಕ್ಷಿಸದೆ, ನಮ್ಮ ಊರು, ನಮ್ಮ ಕೆರೆ ಮತ್ತು ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಬೇಕಿದೆ’ ಎಂದು ಅವರು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

ಹೇಮಾವತಿ ವಿ. ಹೆಗ್ಗಡೆ ಮಾತನಾಡಿ, ‘ಕೆರೆಯು ಆಯಾ ಊರಿನ ಕಲ್ಪವೃಕ್ಷವಾಗಿದ್ದು ಸಕಲ ಜೀವರಾಶಿಗಳಿಗೂ ಉಪಯುಕ್ತವಾಗಿದೆ. ಪ್ರತಿ ದೇವಾಲಯದಲ್ಲಿ ಕ್ಷೇತ್ರಪಾಲ ರಕ್ಷಣೆ ಮಾಡಿದಂತೆ ಕೆರೆ ಸಮಿತಿಯವರು ಊರಿನ ಕೆರೆಯನ್ನು ಜತನದಿಂದ ಕಾಪಾಡಬೇಕು’ ಎಂದು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶಿವಾನಂದ ಕಳವೆ ಅವರು, ಕೆರೆಗಳ ಸಂರಕ್ಷಣೆ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಕೆರೆ ಸಮಿತಿಯ ಸದಸ್ಯ ಕಿತ್ತೂರಿನ ಮಲ್ಲಿಕಾರ್ಜುನ ಹುದಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್. ಉಪಸ್ಥಿತರಿದ್ದರು. ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ಎಂಜಿನಿಯರ್ ನಿಂಗರಾಜ್ ಧನ್ಯವಾದವಿತ್ತರು. ನಿರ್ದೇಶಕ ಶಿವಾನಂದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!