ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ವಾರ್ಷಿಕ ಕಾರ್ಯಕ್ರಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಭಾ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಸಾಧನೆ ಮಾಡಿದ ಹಿರಿಯ, ಯುವ ಮತ್ತು ಮಹಿಳಾ ಹೀಗೆ ಆಯ್ದ ಮೂರು ಜನ ಸಾಧಕರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಬಂಟ್ವಾಳ ತಾಲೂಕುಗಳನ್ನೊಳಗೊಂಡು ಒಟ್ಟು 64 ಗ್ರಾಮಗಳಲ್ಲಿ 66 ಒಕ್ಕೂಟ ರಚನೆ ಹಾಗೂ 1050 ಗುಂಪುಗಳನ್ನು ರಚನೆ ಮಾಡಿಕೊಂಡು ಸುಮಾರು 10 ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದೆ. ಈಗಾಗಲೇ ದಶಮಾನೋತ್ಸವದ ಅಂಗವಾಗಿ ಎಲ್ಲಾ ಒಕ್ಕೂಟಗಳಲ್ಲಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸಮಾಜದ ದಂಪತಿಗಳನ್ನು ಗುರುತಿಸಿ ಗೌರವಿಸಲಾಗಿದೆ ಎಂದು ತಿಳಿಸಿದರು.
ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್, ಜಾತ್ಯಾತೀಯ ಜನತಾದಳದ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅಖಿಲ ಕರ್ನಾಟಕ ಮಹಿಳಾ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷೆ ಡಾ.ಶಾಂತ ಸುರೇಂದ್ರ ಗೌಡ, ಶಾಸಕ ಮಂಥರ್ ಗೌಡ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಪ್ರವರ್ತಕ, ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಗೌಡ, ದಶಮಾನೋತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್, ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.