ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಹಲವು ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತಳಾಗಿ ಹಂತ ಹಂತವಾಗಿ ಬೆಳೆದಿದ್ದ ಮಂಜುಳಾ, ಬಿಜೆಪಿ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಹುದ್ದೆಗೇರಿದ್ದರು. ಆದರೆ, ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಮಂಜುಳಾ ಕೆಲವು ತಿಂಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದಳು. ಗಂಡನ ನಿಧನದಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಇತ್ತೀಚೆಗೆ ರಾಜಕೀಯ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಲಾಗದೇ ಮಾನಸಿಕ ಖಿನ್ನತೆಯಿಂದ ಹೊರಬರಲಾಗದೇ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಮಧ್ಯಾಹ್ನ ಮತ್ತಿಕೆರಯ ಮನೆಯಲ್ಲಿ ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂತರ, ಸಾವಿನ ಸ್ಥಳವನ್ನು ಪರಿಶೀಲನೆ ಮಾಡಿದಾಗ ಪೊಲೀಸರಿಗೆ ಮಂಜುಳಾ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.

ಇನ್ನು ಮಂಜುಳಾ ಬರೆದಿಟ್ಟ ಡೆತ್ ನೋಟ್‌ನಲ್ಲಿ ಜೀವನದಲ್ಲಿ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಉಲ್ಲೇಖ ಮಾಡಿದ್ದಾರಂತೆ. ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!