ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇವತ್ತು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ಗೆ ಸೂಚನೆ ನೀಡಿದ್ದಾರೆ.

ಮಾರ್ಚ್ 17 ರಂದು ಸೋಮವಾರವಾದ ಇವತ್ತು ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಇದನ್ನು ಹಾಕಿರುವವರಿಗೆ ಡಿಸಿಎಂ ಸೂಚಿಸಿದ್ದಾರೆ.

ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದೇನೆ. ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ. ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ ಎಂದು ಗರಂ ಆಗಿದ್ದಾರೆ.

ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧ ಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!